Mon. Dec 1st, 2025

ಸಿಬಿಐ ತನಿಖೆ ವಿರುದ್ಧ ಡಿಕೆಶಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ. 29ಕ್ಕೆ ಮುಂದೂಡಿಕೆ

ಸಿಬಿಐ ತನಿಖೆ ವಿರುದ್ಧ ಡಿಕೆಶಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ. 29ಕ್ಕೆ ಮುಂದೂಡಿಕೆ

ನ ೨೩: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಹಿಂದಿನ ಸರ್ಕಾರ ನೀಡಿದ್ದ ಅನುಮತಿಯ ವಿರುದ್ಧ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ನವೆಂಬರ್ 29ಕ್ಕೆ ಮುಂದೂಡಿದೆ.

ಶಿವಕುಮಾರ್ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಮತ್ತು ಹಿರಿಯ ವಕೀಲ ಉದಯ್ ಹೊಳ್ಳ ಅವರು ಜಂಟಿ ಮೆಮೊ ಸಲ್ಲಿಸಿದ ನಂತರ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆಯನ್ನು ಮುಂದೂಡಿದೆ.

ನವೆಂಬರ್ 15 ರಂದು, ಸಿಬಿಐ ತನಿಖೆ ನಡೆಸಲು ಸರ್ಕಾರದ ಅನುಮತಿಗೆ ಹೈಕೋರ್ಟ್ ತಡೆ ನೀಡಿದ್ದ ಹಿನ್ನೆಲೆಯಲ್ಲಿ ಇನ್ನು ಎರಡು ವಾರದಲ್ಲಿ ಅರ್ಜಿ ಇತ್ಯರ್ಥಪಡಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ ಎಂದು ಸಿಬಿಐ ಹೈಕೋರ್ಟ್ ವಿಭಾಗೀಯ ಪೀಠದ ಗಮನಕ್ಕೆ ತಂದಿತ್ತು. ಹೀಗಾಗಿ ಹೈಕೋರ್ಟ್ ವಿಚಾರಣೆಯನ್ನು ನವೆಂಬರ್ 22ಕ್ಕೆ ನಿಗದಿಪಡಿಸಿತ್ತು.

ಆದಾಗ್ಯೂ, ಅದೇ ಸಮಯದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೊಂದು ಪ್ರಕರಣವಿರುವುದರಿಂದ ಸಿಬಿಐ ನವೆಂಬರ್ 27 ರಂದು ತನ್ನ ವಾದವನ್ನು ಮಂಡಿಸಲಿದೆ ಎಂದು ಇಂದು ಎಎಸ್‌ಜಿ ನ್ಯಾಯಾಲಯಕ್ಕೆ ತಿಳಿಸಿದರು.

ನವೆಂಬರ್ 27 ರಂದು ಯಾವುದೇ ವಿಚಾರಣೆ ಇರುವುದಿಲ್ಲ ಎಂದ ಹೈಕೋರ್ಟ್, ವಿಚಾರಣೆಯನ್ನು ನವೆಂಬರ್ 29ಕ್ಕೆ ಮುಂದೂಡಿದೆ.

ಡಿಕೆ ಶಿವಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಸರ್ಕಾರ 2019ರ ಸೆಪ್ಟೆಂಬರ್ 25ರಂದು ನೀಡಿದ್ದ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ವಜಾಗೊಳಿಸಿತ್ತು. ಹೀಗಾಗಿ ಶಿವಕುಮಾರ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

Related Post

Leave a Reply

Your email address will not be published. Required fields are marked *

error: Content is protected !!